ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಕಲರವ
ವಿದ್ಯಾರ್ಥಿಗಳು ಪಠ್ಯಪುಸ್ತಕಗಳನ್ನು ಮಾತ್ರವಲ್ಲದೇ ಕನ್ನಡ ಸಾಹಿತ್ಯದ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಹೊಂದಬೇಕು. ಕನ್ನಡ ಸಾಹಿತ್ಯವು ವಿಶಾಲವಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೌರವ ಸಂಸ್ಥಾಪಕ ಅಧ್ಯಕ್ಷರಾದ ಡಾ.ಎಂ.ಆರ್.ದೊರೆಸ್ವಾಮಿ ತಿಳಿಸಿದರು.
ನಗರದ ಪಿಇಎಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಮತ್ತು ಶಿಕ್ಷಕರ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವದಂದು ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕನ್ನಡ ನಾಡು ನುಡಿಯ ಮಹತ್ವವನ್ನು ಸಾರುವುದು ಈ ದಿನದ ಉದ್ದೇಶವಾಗಿರಬೇಕು. ಶಿಕ್ಷಕರು ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸರ್ವಪಲ್ಲಿ ರಾಧಾಕೃಷ್ಣನ್‌ರಂತಹ ಮೇರು ವ್ಯಕ್ತಿತ್ವವನ್ನು ಮಾದರಿಯನ್ನಾಗಿಸಿಕೊಂಡು, ಅವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರನ್ನು ಪ್ರೋತ್ಸಾಹಿಸಲು ಪ್ರತಿವರ್ಷ ವಿಶ್ವವಿದ್ಯಾಲಯದಲ್ಲಿ ಉತ್ತಮ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥರಾದ ಪ್ರೊ.ವಿ.ಕೃಷ್ಣ ಮಾತನಾಡಿ, ಕನ್ನಡಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಅದನ್ನು ವಿದ್ಯಾರ್ಥಿಗಳು ಅರಿತು ಸಾಂಸ್ಕೃತಿಕ ಜಗತ್ತಿನ ರಾಯಭಾರಿಗಳಾಗಬೇಕು. ಎಲ್ಲ ಸಂದರ್ಭಗಳಲ್ಲೂ ವಿದ್ಯಾರ್ಥಿಗಳು ಶಿಕ್ಷಕರನ್ನು ಅನುಸರಿಸುತ್ತಾರೆ. ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಪಿಇಎಸ್ ಹನುಮಂತ ನಗರ ಕ್ಯಾಂಪಸ್‌ನ ಶೈಕ್ಷಣಿಕ ನಿರ್ದೇಶಕರಾದ ಪ್ರೊ.ಎಂ.ವಿ.ಸತ್ಯನಾರಾಯಣ, ಪಿಯುಸಿ ಮತ್ತು ಪದವಿ ವಿಭಾಗದ ಪ್ರಾಂಶುಪಾಲರಾದ ಡಾ.ಸಿ.ನಾರಾಯಣ ರೆಡ್ಡಿ, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಪಾಲಕರು ಭಾಗವಹಿಸಿದ್ದರು.
- #Event
- November 20, 2021
- Viewed - 2554
- Liked - 5